SOCIAL MEDIA

Newsletter

PARTNER SITES
Select Language Select State

ಭದ್ರಾ ಜಲಾಶಯ: 10 ದಿನ ಸಾಕಾಗಲ್ಲ, 20 ದಿನ ನೀರು ಹರಿಸಿ ಎಂದು ರೈತರ ಪ್ರತಿಭಟನೆ

ಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರಿಗೆ ರಾಜ್ಯ ಸರ್ಕಾರ ಹಾಗೂ ನೀರಾವರಿ ಇಲಾಖೆಯು ರೈತರ ಸತತ ಬೇಡಿಕೆ ಮತ್ತು ತೋಟಗಾರಿಕಾ ಬೆಳೆಗಳ ರಕ್ಷಣೆಯ ಹಿತದೃಷ್ಟಿಯಿಂದ ಇಂದು ಭದ್ರಾ ಡ್ಯಾಂಗೆ ನೀರು ಹರಿಸಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ 10 ದಿನಗಳ ಕಾಲ ನಿರಂತರವಾಗಿ ಒಟ್ಟು 1500 ಕ್ಯೂಸೆಕ್ ನೀರನ್ನು ನಾಲೆಗಳ ಮೂಲಕ ಹರಿಸಲಾಗುತ್ತದೆ ಎನ್ನಲಾಗಿತ್ತು. ಆದರೆ ರೈತ ಸಂಘ ಮತ್ತು ಹಸಿರು ಸೇನೆಯು 20 ದಿನಗಳ ಕಾಲ ನೀರು ಹರಿಸುವಂತೆ ಪ್ರತಿಭಟನೆ ನಡೆಸಿದ್ದಾರೆ.

Written By Yashaswini V
Published: Nov 16, 2026, 14:24 IST | Updated: Nov 16, 2026, 14:28 IST
Join

ಶಿವಮೊಗ್ಗ: ಮಲೆನಾಡು ಮತ್ತು ಬಯಲು ಸೀಮೆಯ ಜೀವನಾಡಿ ಭದ್ರಾ ಜಲಾಶಯದ ನೀರು ಹಂಚಿಕೆ ವಿಚಾರದಲ್ಲಿ ಜಿಲ್ಲೆಯಲ್ಲಿ ಸರ್ಕಾರದ ನೀರು ನಿರ್ವಹಣೆಯ ವೈಫಲ್ಯವನ್ನು ಖಂಡಿಸಿ ರೈತರು ಬೀದಿಗಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದಿನಿಂದ (ನವೆಂಬರ್ 16) ಭದ್ರಾ ನಾಲೆಗಳಿಗೆ ನೀರು ಹರಿಸಲು ನಿರ್ಧರಿಸಿರುವುದಕ್ಕೆ ಒಂದು ಬಣದ ರೈತರು ಸ್ವಾಗತ ಕೋರಿದ್ದರೆ, ಮತ್ತೊಂದೆಡೆ 10 ದಿನಗಳ ಬದಲು 20 ದಿನಗಳ ಕಾಲ ನೀರು ಹರಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದೆ.

ಭದ್ರಾ ಅಚ್ಚುಕಟ್ಟು ಪ್ರದೇಶದ ಒಣಗುತ್ತಿರುವ ತೆಂಗು ಮತ್ತು ಅಡಿಕೆ ತೋಟಗಳ ರಕ್ಷಣೆಗಾಗಿ ಇಂದಿನಿಂದ ಮುಂದಿನ 10 ದಿನಗಳ ಕಾಲ ಬಲದಂಡೆ ಮತ್ತು ಎಡದಂಡೆ ನಾಲೆಗಳಿಗೆ ಒಟ್ಟು 1500 ಕ್ಯೂಸೆಕ್ ನೀರನ್ನು ಹರಿಸಲು ನಿರ್ಧರಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ರೈತ ಸಂಘದ ಅಧ್ಯಕ್ಷ ಹೆಚ್. ಆರ್. ಬಸವರಾಜಪ್ಪ, ಸರ್ಕಾರದ ಈ ನಿರ್ಧಾರದಿಂದ ರೈತರ ಬೆಳೆಗಳಿಗೆ ಜೀವ ತುಂಬಿದಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ನೀರು ಹರಿಸಲು ಕ್ರಮ ಕೈಗೊಂಡ ಮುಖ್ಯಮಂತ್ರಿಗಳು, ನೀರಾವರಿ ಸಚಿವರು ಹಾಗೂ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಅವರಿಗೆ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಆದರೆ, ಕೇವಲ 10 ದಿನಗಳ ನೀರು ತೋಟಗಾರಿಕಾ ಬೆಳೆಗಳನ್ನು ಉಳಿಸಿಕೊಳ್ಳಲು ಸಾಲುವುದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಬಣ ತೀವ್ರ ಅಸಮಾಧಾನ ಹೊರಹಾಕಿದೆ. ರಾಜ್ಯ ಅಧ್ಯಕ್ಷೀಯ ಮಂಡಳಿಯ ಸದಸ್ಯ ಕೆ.ಟಿ. ಗಂಗಾಧರ್ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ನೂರಾರು ರೈತರು, ಭದ್ರಾ ಜಲಾಶಯದ ನೀರು ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿದ್ದಾರೆ.

ಪ್ರತಿಭಟನಾನಿರತ ರೈತರು ಭದ್ರಾ ಜಲಾಶಯದ ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ಕನಿಷ್ಠ 20 ದಿನಗಳ ಕಾಲ ನಿರಂತರವಾಗಿ ನೀರು ಹರಿಸಬೇಕು ಎಂದು ಪ್ರಮುಖ ಬೇಡಿಕೆ ಮುಂದಿಟ್ಟಿದ್ದಾರೆ. ಇದರೊಂದಿಗೆ, ಭವಿಷ್ಯದ ನೀರಿನ ಅಭಾವವನ್ನು ನೀಗಿಸಲು ತುಂಗಾ ಜಲಾಶಯದಿಂದ ಭದ್ರಾ ಜಲಾಶಯಕ್ಕೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾಮಗಾರಿಯನ್ನು ತಕ್ಷಣವೇ ಪೂರ್ಣಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ನೀರು ನಿರ್ವಹಣೆಯಲ್ಲಿ ಅಧಿಕಾರಿಗಳು ಮತ್ತು ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿರುವುದರಿಂದ ಅನ್ನದಾತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಕೆ.ಟಿ. ಗಂಗಾಧರ್ ಕಿಡಿಕಾರಿದ್ದಾರೆ.

ರೈತರ ಈ ನ್ಯಾಯಯುತ ಹೋರಾಟಕ್ಕೆ ಜಿಲ್ಲಾ ಜೆಡಿಎಸ್ ಮುಖಂಡರು ಸಂಪೂರ್ಣ ಬೆಂಬಲ ಸೂಚಿಸಿದರು. ಪ್ರತಿಭಟನೆಯಲ್ಲಿ ಖುದ್ದು ಭಾಗವಹಿಸಿ ಮಾತನಾಡಿದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರೈತರ ತೋಟಗಳು ಒಣಗುತ್ತಿದ್ದರೂ ಸರ್ಕಾರ ಸಕಾಲಕ್ಕೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ ಅವರು, ತಕ್ಷಣವೇ 20 ದಿನಗಳ ಕಾಲ ನಾಲೆಗಳಿಗೆ ನೀರು ಹರಿಸಿ ರೈತರ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.

ಒಟ್ಟಾರೆಯಾಗಿ, ಭದ್ರಾ ಜಲಾಶಯದ ನೀರು ಬಿಡುಗಡೆಯ ವಿಚಾರವು ಶಿವಮೊಗ್ಗದಲ್ಲಿ ಪರ-ವಿರೋಧದ ಚರ್ಚೆಗೆ ಕಾರಣವಾಗಿದ್ದು, ಸರ್ಕಾರ 10 ದಿನಗಳ ನೀರಿನ ಅವಧಿಯನ್ನು 20 ದಿನಗಳಿಗೆ ವಿಸ್ತರಿಸಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.
 

Add Zee News as a Preferred Source
TAGS:

About the Author

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ತಮ್ಮ ಬರವಣಿಗೆಯನ್ನು ಓದುಗರೊಂದಿಗೆ ಸಂಪರ್ಕ ಸಾಧಿಸುವ ಮಾಧ್ಯಮವೆಂದು ಪರಿಗಣಿಸುವ ಯಶಸ್ವಿನಿ ವಿ ಅವರು ವ್ಯವಹಾರ, ವೈಯಕ್ತಿಕ ಹಣಕಾಸು, ಕೇಂದ್ರ ಬಜೆಟ್, ರಾಜ್ಯ ಬಜೆಟ್, ಕೇಂದ್ರ ಸರ್ಕಾರಿ ನೌಕರರು, ವೇತನ ಆಯೋಗಗಳು, ಸರ್ಕಾರಿ ನೀತಿಗಳು, ಪಿಂಚಣಿ ಯೋಜನೆಗಳು, ಪಿಂಚಣಿದಾರರು, ಆದಾಯ ತೆರಿಗೆ, ಬ್ಯಾಂಕಿಂಗ್, ಆರ್ಥಿಕತೆ, ಕೃಷಿ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಬರೆಯುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ರಾಜಕೀಯ ಬೆಳವಣಿಗೆಗಳು, ಆರೋಗ್ಯ, ಜೀವನಶೈಲಿ, ಆಧ್ಯಾತ್ಮಿಕ, ತಂತ್ರಜ್ಞಾನ ಸಂಬಂಧಿತ ಉತ್ತಮ ಮೌಲ್ಯಯುತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. 
Read More

ZEENEWS TRENDING STORIES