SOCIAL MEDIA

Newsletter

PARTNER SITES
Select Language Select State

4 ಪಂದ್ಯ, 303 ರನ್, 16 ಸಿಕ್ಸರ್‌! ಸೆಹ್ವಾಗ್ ಪುತ್ರನ ಅಬ್ಬರ; ಫೈನಲ್‌ನಲ್ಲಿ ಪಾಕ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ ಭಾರತ?

ಅಂಡರ್-19 ಏಷ್ಯಾಕಪ್ ಸೆಮಿಫೈನಲ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದ ಭಾರತ ಫೈನಲ್ ಪ್ರವೇಶಿಸಿದೆ. 228 ರನ್‌ಗಳ ಗುರಿಯನ್ನ 36.5 ಓವರ್‌ಗಳಲ್ಲಿ ಬೆನ್ನಟ್ಟಿದ ಭಾರತ ಪರ ನಾಯಕ ಲಕ್ಷ್ಯ ರಾಯ್‌ಚಂದಾನಿ 93 ರನ್, ಆರ್ಯವೀರ್ ಸೆಹ್ವಾಗ್ 51 ರನ್ ಗಳಿಸಿದರು. ನಾಲ್ಕು ಪಂದ್ಯಗಳಲ್ಲಿ 303 ರನ್ ಸಿಡಿಸಿರುವ ಆರ್ಯವೀರ್ ಈಗ ಗಮನ ಸೆಳೆದಿದ್ದಾರೆ. ಫೈನಲ್‌ನಲ್ಲಿ ಪಾಕಿಸ್ತಾನ ಎದುರಾಗಲಿದ್ದು, ಲೀಗ್ ಹಂತದ ಸೋಲಿಗೆ ಭಾರತ ಸೇಡು ತೀರಿಸಿಕೊಳ್ಳುತ್ತಾ ಎಂಬ ಕುತೂಹಲ ಮೂಡಿದೆ.

Written By Puttaraj K Alur
Published: Nov 12, 2026, 17:55 IST | Updated: Nov 12, 2026, 18:08 IST
Image Credit: Aaryavir Sehwag
Join

Aaryavir Sehwag: ಅಂಡರ್-19 ಏಷ್ಯಾಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿದೆ. ಅಫ್ಘಾನಿಸ್ತಾನ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಎಂಟು ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿರುವ ಭಾರತ, ಇದೀಗ ಪ್ರಶಸ್ತಿಗಾಗಿ ಮತ್ತೊಮ್ಮೆ ಪಾಕಿಸ್ತಾನ ತಂಡವನ್ನ ಎದುರಿಸಲಿದೆ. ಈ ಟೂರ್ನಿಯಲ್ಲಿ ಲೀಗ್ ಹಂತದಲ್ಲೇ ಪಾಕಿಸ್ತಾನ ವಿರುದ್ಧ ಸೋಲು ಕಂಡಿದ್ದ ಭಾರತಕ್ಕೆ ಫೈನಲ್‌ನಲ್ಲಿ ಆ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶ ಸಿಕ್ಕಿದೆ. ಮತ್ತೊಂದೆಡೆ ಟೂರ್ನಿಯುದ್ದಕ್ಕೂ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ವೀರೇಂದ್ರ ಸೆಹ್ವಾಗ್ ಪುತ್ರ ಆರ್ಯವೀರ್ ಸೆಹ್ವಾಗ್ ಕೂಡ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ.

ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಅಫ್ಘಾನಿಸ್ತಾನ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿತು. ಈ ಗುರಿಯನ್ನ ಬೆನ್ನಟ್ಟಿದ ಭಾರತ ತಂಡ 36.5 ಓವರ್‌ಗಳಲ್ಲಿ ಕೇವಲ ಎರಡು ವಿಕೆಟ್ ಕಳೆದುಕೊಂಡು 230 ರನ್ ಗಳಿಸಿತು. ಈ ಮೂಲಕ ಎಂಟು ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿ ಫೈನಲ್‌ಗೆ ಲಗ್ಗೆ ಇಟ್ಟಿತು. ಭಾರತದ ಪರ ನಾಯಕ ಲಕ್ಷ್ಯ ರಾಯ್‌ಚಂದಾನಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಅವರು 90 ಎಸೆತಗಳಲ್ಲಿ 93 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಇನ್ನು ಆರ್ಯವೀರ್ ಸೆಹ್ವಾಗ್ ಕೂಡ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾದರು. ಇವರಿಬ್ಬರ ನಡುವಿನ ಉತ್ತಮ ಜೊತೆಯಾಟ ಭಾರತವನ್ನ ಗೆಲುವಿನ ಹಾದಿಗೆ ಕೊಂಡೊಯ್ದಿತು.

ಅರ್ಧಶತಕ ಸಿಡಿಸಿದ ಆರ್ಯವೀರ್ ಸೆಹ್ವಾಗ್

ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಆರ್ಯವೀರ್ ಸೆಹ್ವಾಗ್ 57 ಎಸೆತಗಳನ್ನ ಎದುರಿಸಿ 51 ರನ್ ಗಳಿಸಿದರು. ತಮ್ಮ ಇನ್ನಿಂಗ್ಸ್‌ನಲ್ಲಿ ನಾಲ್ಕು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳನ್ನ ಬಾರಿಸಿದರು. ಆರಂಭದಲ್ಲಿ ರನ್ ಗಳಿಸಲು ಸ್ವಲ್ಪ ತಡಕಾಡಿದ ಆರ್ಯವೀರ್, ಕ್ರೀಸ್‌ನಲ್ಲಿ ನೆಲೆಯೂರಿದ ಬಳಿಕ ಆಕ್ರಮಣಕಾರಿ ಆಟಕ್ಕೆ ಮುಂದಾದರು. ವಿಶೇಷವಾಗಿ ಸ್ಪಿನ್ನರ್‌ಗಳ ವಿರುದ್ಧ ಉತ್ತಮವಾಗಿ ಆಡಿದ ಅವರು, ಸಿಕ್ಸರ್‌ಗಳ ಮೂಲಕ ರನ್ ಗಳಿಸಿದರು. ಸೊಹೈಲ್ ಖಾನ್ ಬೌಲಿಂಗ್‌ನಲ್ಲಿ ಒಂದೇ ಓವರ್‌ನಲ್ಲಿ ಎರಡು ಸಿಕ್ಸರ್‌ಗಳನ್ನ ಬಾರಿಸಿ ಗಮನ ಸೆಳೆದರು. ಇದೇ ಬೌಲರ್ ವಿರುದ್ಧ ಒಟ್ಟು ಮೂರು ಸಿಕ್ಸರ್‌ಗಳನ್ನ ಸಿಡಿಸಿದರು. ಸಿಕ್ಸರ್ ಬಾರಿಸುವ ಮೂಲಕವೇ ಅರ್ಧಶತಕ ಪೂರೈಸಿದ ಆರ್ಯವೀರ್, ನಂತರದ ಎಸೆತದಲ್ಲಿ ಪುಲ್ ಶಾಟ್ ಆಡಲು ಹೋಗಿ ವಿಕೆಟ್ ಕಳೆದುಕೊಂಡರು.

ನಾಲ್ಕು ಪಂದ್ಯಗಳಲ್ಲಿ 303 ರನ್, 16 ಸಿಕ್ಸರ್

ಆರ್ಯವೀರ್ ಸೆಹ್ವಾಗ್ ಈ ಬಾರಿಯ ಅಂಡರ್-19 ಏಷ್ಯಾಕಪ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಆಡಿರುವ ನಾಲ್ಕು ಪಂದ್ಯಗಳಿಂದ ಒಟ್ಟು 303 ರನ್ ಗಳಿಸುವ ಮೂಲಕ ಟೂರ್ನಿಯಲ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಅವರ ಖಾತೆಯಲ್ಲಿ 29 ಬೌಂಡರಿ ಹಾಗೂ 16 ಸಿಕ್ಸರ್‌ಗಳಿವೆ. ನೇಪಾಳ ವಿರುದ್ಧದ ಪಂದ್ಯದಲ್ಲಿ ಆರ್ಯವೀರ್ ಅಜೇಯ 70 ರನ್ ಗಳಿಸಿದ್ದರು. ಪಾಕಿಸ್ತಾನ ವಿರುದ್ಧದ ಲೀಗ್ ಪಂದ್ಯದಲ್ಲಿ 22 ರನ್ ಗಳಿಸಿ ಔಟಾಗಿದ್ದರು. ಆದರೆ ಯುಎಇ ವಿರುದ್ಧದ ಪಂದ್ಯದಲ್ಲಿ ತಮ್ಮ ಸಾಮರ್ಥ್ಯವನ್ನ ಸಾಬೀತುಪಡಿಸಿದ ಅವರು, 168 ಎಸೆತಗಳಲ್ಲಿ 160 ರನ್‌ಗಳ ಭರ್ಜರಿ ಇನ್ನಿಂಗ್ಸ್ ಆಡಿದ್ದರು.

ಇದೀಗ ಅಫ್ಘಾನಿಸ್ತಾನ ವಿರುದ್ಧ 51 ರನ್ ಗಳಿಸುವ ಮೂಲಕ ಮತ್ತೊಂದು ಅರ್ಧಶತಕ ದಾಖಲಿಸಿದ್ದಾರೆ. ಯುಎಇ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಆರ್ಯವೀರ್, ಸೆಮಿಫೈನಲ್‌ನಲ್ಲೂ ಉತ್ತಮ ಪ್ರದರ್ಶನ ನೀಡಿರುವುದು ತಂಡಕ್ಕೆ ನೆರವಾಗಿದೆ. ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರ ಪುತ್ರನಾಗಿರುವ ಆರ್ಯವೀರ್, ತಮ್ಮ ಬ್ಯಾಟಿಂಗ್ ಮೂಲಕ ಟೂರ್ನಿಯಲ್ಲಿ ಗಮನ ಸೆಳೆಯುತ್ತಿದ್ದಾರೆ.

ಫೈನಲ್‌ನಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿ

ಇದೀಗ ಅಂಡರ್-19 ಏಷ್ಯಾಕಪ್‌ನ ಫೈನಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಲೀಗ್ ಹಂತದಲ್ಲಿ ನಡೆದಿದ್ದ ಪಂದ್ಯದಲ್ಲಿ ಪಾಕಿಸ್ತಾನ ಭಾರತವನ್ನ ಮೂರು ವಿಕೆಟ್‌ಗಳಿಂದ ಸೋಲಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 46.3 ಓವರ್‌ಗಳಲ್ಲಿ 208 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಪಾಕಿಸ್ತಾನ 48.1 ಓವರ್‌ಗಳಲ್ಲಿ ಏಳು ವಿಕೆಟ್ ಕಳೆದುಕೊಂಡು 209 ರನ್ ಗಳಿಸಿ ಗೆಲುವು ಸಾಧಿಸಿತ್ತು. ಆ ಪಂದ್ಯದಲ್ಲಿ ಭಾರತದ ಪರ ಅರ್ಜುನ್ ರಾಜ್‌ಪೂತ್ 107 ರನ್‌ಗಳ ಶತಕದ ಇನ್ನಿಂಗ್ಸ್ ಆಡಿದ್ದರು. ಆರ್ಯವೀರ್ ಸೆಹ್ವಾಗ್ 22 ರನ್ ಗಳಿಸಿದ್ದರು. ಆದರೆ ಪಾಕಿಸ್ತಾನದ ಹಮ್ಜಾ ಝಹೂರ್ ಅಜೇಯ ಶತಕದ ನೆರವಿನಿಂದ ಪಾಕ್ ತಂಡ ಗೆಲುವು ಸಾಧಿಸಿತ್ತು.

ಈಗ ಫೈನಲ್‌ನಲ್ಲಿ ಮತ್ತೊಮ್ಮೆ ಉಭಯ ತಂಡಗಳು ಮುಖಾಮುಖಿಯಾಗುತ್ತಿರುವುದರಿಂದ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ಲೀಗ್ ಹಂತದಲ್ಲಿ ಎದುರಾದ ಸೋಲಿಗೆ ಫೈನಲ್‌ನಲ್ಲಿ ಭಾರತ ಸೇಡು ತೀರಿಸಿಕೊಳ್ಳುತ್ತಾ? ಅಥವಾ ಪಾಕಿಸ್ತಾನ ಮತ್ತೊಮ್ಮೆ ಮೇಲುಗೈ ಸಾಧಿಸುತ್ತಾ ಎಂಬುದನ್ನ ಕಾದುನೋಡಬೇಕಿದೆ. ಪ್ರಶಸ್ತಿ ಗೆಲ್ಲುವ ಗುರಿಯೊಂದಿಗೆ ಕಣಕ್ಕಿಳಿಯಲಿರುವ ಭಾರತ ತಂಡದ ಪ್ರದರ್ಶನದ ಮೇಲೆ ಎಲ್ಲರ ಗಮನ ನೆಟ್ಟಿದೆ.

Add Zee News as a Preferred Source
TAGS:

About the Author

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ZEENEWS TRENDING STORIES